Please enable javascript.Chandrashekhar Patil,ಸಾಹಿತಿ ಚಂಪಾ ನಿಧನ: ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರ ಸಂತಾಪ - condolence message on chandrashekhar patil death - Vijay Karnataka

ಸಾಹಿತಿ ಚಂಪಾ ನಿಧನ: ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರ ಸಂತಾಪ

Vijaya Karnataka Web | 10 Jan 2022, 9:27 am
Subscribe

ಕನ್ನಡದ ಖ್ಯಾತ ಸಾಹಿತಿ, ಕವಿ ಹಾಗೂ ವಿಮರ್ಶಕ ಚಂದ್ರಶೇಖರ್ ಪಾಟೀಲ್ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂಪಾ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹೈಲೈಟ್ಸ್‌:

  • ಕನ್ನಡದ ಖ್ಯಾತ ಸಾಹಿತಿ, ಕವಿ ಹಾಗೂ ವಿಮರ್ಶಕ ಚಂದ್ರಶೇಖರ್ ಪಾಟೀಲ್ ನಿಧನ
  • ಚಂಪಾ ನಿಧನಕ್ಕೆ ಗಣ್ಯರಿಂದ ಸಂತಾಪ
  • ಸಿಎಂ ಬಸವರಾಜ ಬೊಮ್ಮಾಯಿ ಅವರಿಂದಲೂ ಸಂತಾಪ
chmpa.
ಬೆಂಗಳೂರು : ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ( ಚಂಪಾ) ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕನ್ನಡದ ಹಿರಿಯ ಸಾಹಿತಿ ಚಂಪಾ ಎಂದೇ ಪರಿಚಿತರಾಗಿದ್ದ ಪ್ರೊ.ಚಂದ್ರಶೇಖರ್ ಪಾಟೀಲ್ ಇನ್ನಿಲ್ಲ!

ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರು. ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು. ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಕಟ್ಟುವ ಕೆಲಸದಲ್ಲಿ ಕಾಯಕ ಜೀವಿಯಾಗಿ ಮೆರೆದಿದ್ದಾರೆ. ಕನ್ನಡ ನೆಲ-ಜಲ- ಸಂಸ್ಕೃತಿ-ಭೂಮಿ- ಭಾಷೆ ಯನ್ನು ಕಾಪಾಡುವ ಹೋರಾಟದಲ್ಲಿ ನಾಲ್ಕು ದಶಕಗಳ ಕಾಲ ನಮ್ಮ ನಡುವೆ ರಾಜಿರಾಹಿತವಾಗಿ ಹೋರಾಡಿದ್ದಾರೆ. ಇವರ ಕಾಳಜಿ, ಶ್ರಮ, ಪ್ರತಿರೋಧದ ವ್ಯಕ್ತಿತ್ವ ಕನ್ನಡ ನಾಡಿನ ಹೋರಾಟ ಪರಂಪರೆಯನ್ನು ಉಜ್ವಲಗೊಳಿಸಿದೆ ಎಂದಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿ, ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು.ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು ಎಂದು ಸ್ಮರಿಸಿದ್ದಾರೆ.

ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲರ ಹಠಾತ್ ನಿಧನ ಕನ್ನಡ ನಾಡು ಮತ್ತು ಸಾಹಿತ್ಯ ಹಾಗೂ ಸಂಸ್ಕೃತಿಗೆ ತುಂಬಲಾರದ ನಷ್ಟ ಎಂದು ಸಚಿವ ಮುರುಗೇಶ್ ನಿರಾಣಿ ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ